ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ.
ಇಂದಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು,ಪ್ಲಾಸ್ಟಿಕ್ ಲೋಟ,ತಟ್ಟೆಯಲ್ಲಿ ದೇವರ ಪ್ರಸಾದ ನೀಡುವಂತಿಲ್ಲ ಎಂದು ಆದೇಶಿಸಲಾಗಿದೆ.
ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು,ದೇವಸ್ಥಾನದ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.ದೇವಸ್ಥಾನದ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧಾರ ಮಾಡುತ್ತದೆ,ಪರಿಸರದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಟ್ಟ ದೇವಾಲಯಗಳಲ್ಲಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ದಂಡ ವಿಧಿಸುವಂತೆ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

